ಮಳೆ.. ಮಳೆ.. ಮಳೆ.. ಎಲ್ಲಾ ಕಡೆಯೂ ಮಳೆರಾಯ ಅಬ್ಬರಿಸುತ್ತಾ ಇರುವ ಕಾರಣಕ್ಕೆ ಜನರು ಕೂಡ ಖುಷಿಯಾಗಿ ಈಗ ಕುಣಿದಾಡಿದ್ದಾರೆ. ಅದರಲ್ಲೂ ಈ ಬಾರಿ ಇನ್ನೇನು ಬರಗಾಲ ಎದುರಾಗುತ್ತಿದೆ ಎನ್ನುವ ಸಮಯದಲ್ಲೇ ಭರ್ಜರಿ ಮಳೆಯು ಸುರಿಯುತ್ತಿರುವ ಕಾರಣಕ್ಕೆ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ದಿಢೀರ್ ಮಳೆಯ ಅಬ್ಬರ ಜೋರಾಗಿ, ಎಲ್ಲಾ ಕಡೆಯೂ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗುತ್ತಿರುವುದು ಚಿಂತೆ ಹೆಚ್ಚಿಸಿದೆ. ಇಂತಹ ಸಮಯದಲ್ಲೇ ಮಳೆಯ ಬಗ್ಗೆ ಮಹತ್ವದ ಮುನ್ಸೂಚನೆ ಕೂಡ ನೀಡಲಾಗಿದೆ.
ಕರ್ನಾಟಕದಲ್ಲಿ ಮಳೆರಾಯನ ಅಬ್ಬರ ಮಂದುವರಿದಿದ್ದು, ಇದೀಗ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರಮುಖವಾಗಿ ಉತ್ತರ ಕನ್ನಡ ಜಿಲ್ಲೆ ಹಾಗೂ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಬೆಳಗಾವಿಯ ಹಲವು ಭಾಗದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಇದೇ ಕಾರಣಕ್ಕೆ ಇದೀಗ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯನ್ನೂ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೇ ಹಲವು ಭಾಗಗಳಲ್ಲಿ ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ & ಕಾಲೇಜಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯದ ಮಳೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಮುಂದೆ ಓದಿ.
ಮಳೆ.. ಮಳೆ.. ಭರ್ಜರಿ ಮಳೆ!
ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಈಗ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಎಂದರೆ KSNDMC ಎಚ್ಚರಿಕೆ ಸೂಚನೆ ಪ್ರಕಟಿಸಿದೆ. ವಿಶೇಷವಾಗಿ ಕರಾವಳಿ & ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವ ಕಾರಣದಿಂದ ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಅದರಲ್ಲೂ ಜುಲೈ 8ಕ್ಕೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣದಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮತ್ತೊಂದು ಕಡೆ ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ ಈಗ. ಕೆಲವೆಡೆ 204.4 ಮಿಲಿಮೀಟರ್‌ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಪ್ರತಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಹಾಗೇ ಜುಲೈ 9 ಗುರುವಾರ ಕೂಡ ಇದೇ ರೀತಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಭಾರೀ ಮಳೆಯ ಹಿನ್ನೆಲೆ ನದಿಗಳು, ಹಳ್ಳಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು. ಪ್ರವಾಹ, ಮರ ಬೀಳುವ ಘಟನೆಗಳು, ಭೂಕುಸಿತ & ಸಂಚಾರ ಅಡಚಣೆ ಸಾಧ್ಯತೆ ಗಮನದಲ್ಲಿಟ್ಟುಕೊಂಡು ಅಗತ್ಯ ಸುರಕ್ಷತೆ ಕ್ರಮಗಳನ್ನು ಅನುಸರಿಸುವಂತೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಸಾರ್ವಜನಿಕರಿಗೆ ಸಲಹೆ ನೀಡಿದೆ.
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ
ಹೀಗಿದ್ದಾಗಲೇ ಭಾರಿ ಮಳೆ ಕಾರಣಕ್ಕೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಪೈಕಿ ಮುಂಜಾಗ್ರತಾ ಕ್ರಮವಾಗಿ ಜುಲೈ 8 ಬುಧವಾರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅದರಲ್ಲೂ ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗುವ ಮುನ್ಸೂಚನೆ ಇರುವ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಕೂಡ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.